ತಮಿಳುನಾಡಿಗೆ ಕಾವೇರಿ ನೀರು ಬಿಡುವುದರ ವಿರುದ್ಧ ಬೆಂಗಳೂರಿನಲ್ಲಿ ಬಂದ್ ನಡೆಯುತ್ತಿರುವುದರ ಮಧ್ಯೆಯೇ ಕರ್ನಾಟಕ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ. ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ನಿರ್ಣಯ ಹೊರಬಿದ್ದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಈ ಹಿಂದೆ ನೀಡಿದ್ದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆ ಇಂದು ನಡೆಯಿತು.
ಸಭೆಯಲ್ಲಿ ಎರಡು ಕಡೆಯ ವಾದವನ್ನು ಆಲಿಸಿದ ಸಮಿತಿ ತಮಿಳುನಾಡಿಗೆ ಮುಂದಿನ 15 ದಿನಗಳಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಇದರೊಂದಿಗೆ ಕರ್ನಾಟಕದಲ್ಲಿ ಪ್ರತಿಭಟನೆಯ ಕಿಚ್ಚು ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ. ಈಗಾಗಲೇ ರಾಜ್ಯ ರಾಜಧಾನಿ ಬೆಂಗಳೂರು, ಕಾವೇರಿ ಜಲಾನಯನ ಪ್ರದೇಶಗಳಾದ ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಪ್ರತಿಭಟನೆ ಜೋರಾಗಿದೆ.
ಕರ್ನಾಟಕದ ವಾದ ಏನಿತ್ತು?
ಇಂದಿನ ಸಭೆಯಲ್ಲಿ ಕರ್ನಾಟಕ ಸರ್ಕಾರ ರಾಜ್ಯದ 161 ತಾಲೂಕುಗಳನ್ನು ತೀವ್ರ ಬರ ಪೀಡಿತ ಮತ್ತು 34 ತಾಲೂಕುಗಳನ್ನು ಮಧ್ಯಮ ಬರ ಪೀಡಿತ ಎಂದು ಘೋಷಿಸಿದೆ. ಈ ಪೈಕಿ 32 ತೀವ್ರ ಬರ ಪೀಡಿತ ತಾಲೂಕುಗಳು ಮತ್ತು 15 ಮಧ್ಯಮ ಬರ ಪೀಡಿತ ತಾಲೂಕುಗಳು ಕಾವೇರಿ ಜಲಾನಯನ ಪ್ರದೇಶದಲ್ಲಿವೆ. ಬರ ಇರುವಾಗ ಜಲಾಶಯಗಳಿಂದ ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ರಾಜ್ಯ ಸರ್ಕಾರ ಇಲ್ಲ ಎಂದು ಹೇಳಿತ್ತು.
ತಮಿಳುನಾಡು ವಾದ ಏನಿತ್ತು?
ಕಳೆದ ಜೂನ್ನಿಂದ ಸೆಪ್ಟೆಂಬರ್ವರೆಗೂ 123 ಟಿಎಂಸಿ ನೀರನ್ನು ಹರಿಸಬೇಕಿತ್ತು. ಕರ್ನಾಟಕ ಈವರೆಗೂ ಕೇವಲ 40 ಟಿಎಂಸಿ ನೀರು ಹರಿಸಿದೆ. ಹೀಗಾಗಿ ಬಾಕಿ 83 ಟಿಎಂಸಿ ನೀರು ಕೂಡಲೇ ಬಿಡುಗಡೆ ಮಾಡಬೇಕು ಎಂದು ತಮಿಳುನಾಡು ವಾದ ಮಂಡಿಸಿತ್ತು. ಸಮಿತಿ ಯಾವುದೇ ಕಾರಣಕ್ಕೂ ನೀರಿನ ಪ್ರಮಾಣವನ್ನು ಕಡಿಮೆ ಮಾಡಬಾರದು. ಅಕ್ಟೋಬರ್ 22 ಟಿಎಂಸಿ ನೀರನ್ನು ಸಹ ಕರ್ನಾಟಕ ಹರಿಸಬೇಕು. ರಾಜ್ಯಕ್ಕೆ ಹರಿಸಬೇಕಾದ ನೀರನ್ನು ಸಮಿತಿ ಕೊಡುವಂತೆ ಕರ್ನಾಟಕಕ್ಕೆ ಆದೇಶಿಸಬೇಕು ಎಂದು ತಮಿಳುನಾಡು ಬೇಡಿಕೆ ಇಟ್ಟಿತ್ತು.
ಈ ಬಾರಿಯ ಆದೇಶವು ಸಂಕಷ್ಟದ ಮಧ್ಯೆಯೂ ಕರ್ನಾಟಕಕ್ಕೆ ತುಸು ಸಮಾಧಾನಕರ ಎನ್ನಲಾಗಿದೆ. ಈ ಹಿಂದಿನ ಆದೇಶಗಳಿಗಿಂತ ಕಡಿಮೆ ಪ್ರಮಾಣದಲ್ಲಿ ನೀರು ಬಿಡುಗಡೆಗೆ ಈ ಬಾರಿ ಆದೇಶ ನೀಡಲಾಗಿದೆ. ಮುಂದಿನ 15 ದಿನಗಳಿಗೆ ಮೂರು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಲಾಗಿದೆ.
ಕಾವೇರಿ ಕೊಳ್ಳದಲ್ಲಿ ಶೇ 53 ಮಳೆ ಕೊರತೆಯಿದೆ. ಕರ್ನಾಟಕ 161 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಿದೆ. 34 ತಾಲೂಕುಗಳು ಭಾಗಶಃ ಬರಕ್ಕೆ ತುತ್ತಾಗಿವೆ. ಈ ಪರಿಸ್ಥಿತಿಯಲ್ಲಿ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ. ಜಲಾಶಯಗಳಲ್ಲಿ ನೀರಿಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಸಭೆಯಲ್ಲಿ ಕರ್ನಾಟಕದ ಅಧಿಕಾರಿಗಳು ವಾದ ಮಂಡಿಸಿದ್ದರು. ಇದನ್ನು ಆಲಿಸಿದ ನಂತರ, 3000 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ನೀಡಲಾಗಿದೆ. ಸೆಪ್ಟೆಂಬರ್ 28ರಿಂದ ಅಕ್ಟೋಬರ್ 15ರ ತನಕ ನೀರು ಹರಿಸುವಂತೆ ಆದೇಶಿಸಲಾಗಿದೆ.