ಕೊರೊನಾ ಹಾಟ್ ಸ್ಪಾಟ್ ಎಂದೇ ಗುರುತಿಸಿಕೊಂಡಿರುವ ಮಹಾರಾಷ್ಟ್ರದಲ್ಲಿ ಮತ್ತೆ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 25, 833 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಕೇವಲ ಮಹಾರಾಷ್ಟ್ರ ಮಾತ್ರವಲ್ಲ ನೆರೆಯ ರಾಜ್ಯಗಳಲ್ಲೂ ಆತಂಕ ಶುರುವಾಗಿದೆ.
ಭಾರತದಲ್ಲಿ ಕೊರೊನಾ ಎರಡನೇ ಅಲೆ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಮಹಾರಾಷ್ಟ್ರದಲ್ಲಿ ದಾಖಲೆಯ ಪ್ರಮಾಣದಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ವರೆಗೆ ರಾಜ್ಯದಲ್ಲಿ 23, 96, 340 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.
ನಿನ್ನೆ ಒಂದೇ ದಿನದಲ್ಲಿ ಸೋಂಕಿಗೆ 58 ಮಂದಿ ಬಲಿಯಾಗಿದ್ದು, ಈವರೆಗೆ 53,138 ಸೋಂಕಿನಿಂದ ಮೃತ ಪಟ್ಟಿದ್ದಾರೆ. ಸದ್ಯ ಮಹಾರಾಷ್ಟ್ರದಲ್ಲಿ 1, 66, 353 ಕೋವಿಡ್ ಪ್ರಕರಣಗಳು ಸಕ್ರಿಯವಾಗಿವೆ.
ಇನ್ನು ಮಹಾರಾಷ್ಟ್ರದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಲೇ ನೆರೆಯ ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿರುವ ಮಧ್ಯ ಪ್ರದೇಶ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಅಂತರ್ ರಾಜ್ಯ ಬಸ್ ಸಂಚಾರಕ್ಕೆ ನಿರ್ಬಂಧ ಹೇರಿದೆ.